ಮಂಗಳೂರು, ಆ.28: ಇಲ್ಲಿನ ಬಜ್ಪೆಯ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಚಿನ್ನವನ್ನು ಅಕ್ರಮವಾಗಿ ಸಾಗಾಟಕ್ಕೆ ಯತ್ನಿಸಿದ ಆರೋಪದಲ್ಲಿ ಓರ್ವನನ್ನು ಅಧಿಕಾರಿಗಳು ವಶಕ್ಕೆ ಪಡೆದು, ಚಿನ್ನವನ್ನು ಸ್ವಾಧೀನಪಡಿಸಿಕೊಂಡ ಘಟನೆ ಶನಿವಾರ ನಡೆದಿದೆ.
ಕಾಸರಗೋಡು ಮುಳಿಯಾರ್ ನಿವಾಸಿ ಮುಹಮ್ಮದ್ ನವಾಝ್ ಎಂಬಾತನನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿರುವುದಾಗಿ ತಿಳಿಸಿದ್ದಾರೆ. ಈತ ದುಬೈನಿಂದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಿಂದ ಬಂದಿಳಿದಿದ್ದ. ತಪಾಸಣೆ ವೇಳೆ ಈತ ತೆರಿಗೆ ವಂಚಿಸಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ ಎಂದು ತಿಳಿದುಬಂದಿದ್ದು, ಆರೋಪಿಯನ್ನು ಮಂಗಳೂರು ವಿಮಾನ ನಿಲ್ದಾಣದ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 16,21,400 ರೂ. ಮೌಲ್ಯದ 335 ಗ್ರಾಂ ಚಿನ್ನವನ್ನು ವಶಪಡೆಯಲಾಗಿದೆ. ಈತ ಅನುಮಾನ ಬಾರದ ರೀತಿಯಲ್ಲಿ ಚಿನ್ನವನ್ನು ಸ್ಕೇಟಿಂಗ್ ಬೋರ್ಡ್ ಮತ್ತು ಅದರ ಚಕ್ರಕ್ಕೆ ಸಂಪರ್ಕ ಕಲ್ಪಿಸುವ ರಾಡ್ ಒಳಗೆ ಅಡಗಿಸಿಟ್ಟು ಸಾಗಾಟ ಮಾಡುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post