ಮಂಗಳೂರು, ಸೆ.29: ನಗರ ಹೊರವಲಯದ ಅಡ್ಯಾರ್ ಪರಿಸರದಲ್ಲಿ ಜಾನುವಾರು ಅಕ್ರಮ ಸಾಗಾಟದ ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿದ ಇಬ್ಬರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಫರಂಗಿಪೇಟೆ ಸಮೀಪದ ಅಮೆಮಾರ್‌ನ ತಸ್ಲೀಮ್ ಯಾನೆ ಗರುಡ ತಸ್ಲೀಮ್ (34) ಮತ್ತು ಹೈದರಾಲಿ ಯಾನೆ ಹೈದು (26) ಬಂಧಿತ ಆರೋಪಿಗಳಾಗಿದ್ದಾರೆ. ಈ ಹಿಂದೆ ಕೊಲೆ, ಕೊಲೆಯತ್ನ, ಜಾನುವಾರು ಕಳ್ಳತನ ಹಾಗೂ ಇತರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ತಂಡವೊಂದು ಅಡ್ಯಾರ್ ಪರಿಸರದಲ್ಲಿ ಮಾರಾಕಾಯುಧಗಳೊಂದಿಗೆ ಮತ್ತೊಂದು ತಂಡದ ಸದಸ್ಯರ ಕೊಲೆಗೆ ಸಂಚು ರೂಪಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಫರಂಗಿಪೇಟೆ ಅಮ್ಮೆಮ್ಮಾರ್ ನಿವಾಸಿಗಳಾದ ತಸ್ಲೀಮ್ ಯಾನೆ ಗರುಡ ತಸ್ಲೀಮ್(34), ಹೈದರಾಲಿ ಯಾನೆ ಹೈದು(26) ಎಂಬವರನ್ನು ವಶಕ್ಕೆ ಪಡೆದು ಅವರ ವಶದಲ್ಲಿದ್ದ ತಲವಾರು-2, ಚೂರಿ-1, ಮೊಬೈಲ್ ಫೋನುಗಳು-2, ಹಾಗೂ KL -14-AB-7212 ಮಹೇಂದ್ರ ಪಿಕ್ ಅಪ್ ವಾಹನ ವಶಪಡಿಸಿದ್ದಾರೆ. ವಶಪಡಿಸಿಕೊಂಡ ಸೊತ್ತಿನ ಒಟ್ಟು ಮೌಲ್ಯ ರೂ. 5,21,000/- ಆಗಬಹುದು. ಆರೋಪಿಗಳ ವಿರುದ್ದ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳ ಪೈಕಿ ತಸ್ಲೀಮ್ ಈ ಹಿಂದೆ ಮಂಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಹಾಗೂ ದರೋಡೆ ಪ್ರಕರಣ, ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದ ಜೋಡಿ ಕೊಲೆ ಪ್ರಕರಣ, ಬಂಟ್ವಾಳ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ, ಜಾನುವಾರು ಕಳ್ಳತನ ಪ್ರಕರಣ, ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದ ಕಳವು ಪ್ರಕರಣ ಗಳು, ರೈಲ್ವೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣ ಸಹಿತ 14 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಈತನು 10 ದಿನಗಳ ಹಿಂದೆ ನ್ಯಾಯಾಲಯದಿಂದ ಜಾಮೀನು ಪಡೆದು ಬಿಡುಗಡೆಗೊಂಡಿದ್ದ.
ಇನ್ನೋರ್ವ ಆರೋಪಿ ಹೈದರಾಲಿಯು ಈ ಹಿಂದೆ ಮೂಡುಬಿದಿರೆ ಠಾಣಾ ವ್ಯಾಪ್ತಿಯಲ್ಲಿ ನಡೆದ ಕೊಲೆಯತ್ನ ಪ್ರಕರಣ, ಉಳ್ಳಾಲ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣ ಹಾಗೂ ಕಾರ್ಕಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಜಾನುವಾರು ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post