ಸುರತ್ಕಲ್: ಹೊಸಬೆಟ್ಟು ನಿವಾಸಿ ಸೋಮನಾಥ (45) ಎಂಬವರು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ಬೆಳಗ್ಗೆ ಹೊಸಬೆಟ್ಟು ಜಟ್ಟಿ ಬಳಿ ನಡೆದಿದೆ. ಅವರ ಸಾವಿಗೆ ಪೊಲೀಸರ ದೌರ್ಜನ್ಯವೇ ಕಾರಣ ಎಂದು ಆರೋಪಿಸಿ ಗ್ರಾಮಸ್ಥರು ಮೃತದೇಹವಿದ್ದ ಆ್ಯಂಬುಲೆನ್ಸ್ ಅನ್ನು ರಾಷ್ಟ್ರೀಯ ಹೆದ್ದಾರಿಗೆ ಅಡ್ಡಲಾಗಿ ನಿಲ್ಲಿಸಿ ಪ್ರತಿಭಟನೆ ನಡೆಸಿದರು.
ಗಿರೀಶ್ ಎಂಬವರು ಸೋಮನಾಥ ಅವರಿಗೆ ದೂರವಾಣಿ ಕರೆ ಮಾಡಿದಾಗ ಅವರು ಕರೆ ಸ್ವೀಕರಿಸದಿದ್ದರಿಂದ, ಅವರ ಅಕ್ಕನ ಪತಿ ಗುಡ್ಡಕೊಪ್ಲ ನಿವಾಸಿ ನೀಲಾದರ ಎಂಬವರಿಗೆ ಮಾಹಿತಿ ನೀಡಿದ್ದರು. ಅವರು ಸೋಮನಾಥರ ಮನೆಗೆ ತೆರಳಿ ನೋಡಿದಾಗ, ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ಈ ಸಂಬಂಧ ಅವರು ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಮೃತದೇಹದ ಬಳಿ ಡೆತ್ ನೋಟ್ ಪತ್ತೆಯಾಗಿದ್ದು, ಅದರಲ್ಲಿ ‘ನನ್ನ ಸಾವಿಗೆ ನಾನೇ ಕಾರಣ’ ಎಂದು ಬರೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೋಮನಾಥ ಅವರು ಗೋವಾದಲ್ಲಿ ಕೆಲಸ ಮಾಡುತ್ತಿದ್ದು, ಸದ್ಯ ಹೊಸಬೆಟ್ಟುವಿನಲ್ಲಿ ವಾಸವಾಗಿದ್ದರು. ಅವರು ಪತ್ನಿ ಹಾಗೂ ಏಳು ವರ್ಷದ ಪುತ್ರನನ್ನು ಅಗಲಿದ್ದಾರೆ.
ಅ.25ರಂದು ರಾತ್ರಿ 11.30ರ ಸುಮಾರಿಗೆ ಕುಳಾಯಿ ಮೀನುಗಾರಿಕಾ ಜಟ್ಟಿ ಬಳಿ ಗೆಳೆಯರೊಂದಿಗೆ ಇದ್ದಾಗ, ದಿಲ್ಲಿ ಮೂಲದ ಯುವತಿ ಮತ್ತು ಕೇರಳ ಮೂಲದ ಯುವಕನೊಬ್ಬ ಅಲ್ಲಿರುವುದನ್ನು ಸೋಮನಾಥ ಮತ್ತಿತರರು ಗಮನಿಸಿದ್ದರು. ಬಳಿಕ ಅವರನ್ನು ತಡೆದು ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎಂದು ಯುವತಿ ಪೊಲೀಸರಿಗೆ ದೂರು ನೀಡಿದ್ದರು ಎಂದು ತಿಳಿದು ಬಂದಿದೆ.
ದೂರಿನ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬಂದ ಪೊಲೀಸರು ಸೋಮನಾಥರನ್ನು ಸುರತ್ಕಲ್ ಪೊಲೀಸ್ ಠಾಣೆಗೆ ಕರೆತಂದಿದ್ದರು. ಅವರ ಮೊಬೈಲ್ ಫೋನ್ ಮತ್ತು ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದು, ವೈದ್ಯಕೀಯ ಪರೀಕ್ಷೆ ನಡೆಸಿ, ವೀಡಿಯೊ ಚಿತ್ರೀಕರಿಸಿ ವಿಚಾರಣೆ ಬಳಿಕ ಕಳುಹಿಸಿದ್ದರು ಎನ್ನಲಾಗಿದೆ.
ಇದೇ ವಿಚಾರವಾಗಿ ಸೋಮವಾರ ಬೆಳಿಗ್ಗೆ ಮತ್ತೆ ಠಾಣೆಗೆ ಕರೆಸಿಕೊಂಡು ವೈದ್ಯಕೀಯ ಪರೀಕ್ಷೆ ನಡೆಸಿದ ಬಳಿಕ ತಡರಾತ್ರಿ ಮನೆಗೆ ಕಳುಹಿಸಲಾಗಿತ್ತು. ಮಂಗಳವಾರ ಬೆಳಿಗ್ಗೆ ಮತ್ತೆ ಠಾಣೆಗೆ ಬರುವಂತೆ ಸೂಚಿಸಲಾಗಿತ್ತು ಎನ್ನಲಾಗಿದೆ. ಸೋಮವಾರ ರಾತ್ರಿ ಮನೆಗೆ ಮರಳಿದ್ದ ಸೋಮನಾಥ ಅವರು ಮನನೊಂದು ಮಂಗಳವಾರ ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.







Discussion about this post