ಮಂಗಳೂರು: ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಉಳ್ಳಾಲ ಬೋಳಿಯಾರ್ ನಲಿಕೆದ ಗುಡ್ಡೆ ಮನೆಯ ಮಹಮ್ಮದ್ ಆರೀಫ್(28)ನನ್ನು ಮಂಗಳೂರು ಸಿಸಿಬಿ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಈತನು ಮುಡಿಪು ಕಂಬಳ ಪದವು ಕೆಐಡಿಬಿ ರಸ್ತೆ ಪರಿಸರದಲ್ಲಿ ಕಾರಿನಲ್ಲಿ ಎಂಡಿಎಂಎ ಮಾದಕ ವಸ್ತುವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯಿಂದ 25 ಗ್ರಾಂ ತೂಕದ 1,25,000 ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು, ಮಾರುತಿ ಅಲ್ಟೋ 800 ಕಾರು, ಮೊಬೈಲ್ ಫೋನ್, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ಇವುಗಳ ಮೌಲ್ಯ 6,35,500 ರೂ.ಆಗಬಹುದು ಎಂದು ಅಂದಾಜಿಸಲಾಗಿದೆ. ಆರೋಪಿಯ ವಿರುದ್ಧ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈತನ ವಿರುದ್ಧ ಈ ಹಿಂದೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಜಾನುವಾರು ಕಳ್ಳತನ ಪ್ರಕರಣ ದಾಖಲಾಗಿತ್ತು.
ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕ ಶ್ಯಾಮ್ ಸುಂದರ್ ಎಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ, ಸುದೀಪ್ ಎಂ.ವಿ, ಶರಣಪ್ಪ ಭಂಡಾರಿ, ನರೇಂದ್ರ ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು. ಈ ಮಾದಕ ವಸ್ತು ಮಾರಾಟ ಜಾಲದಲ್ಲಿ ಇನ್ನೂ ಹಲವಾರು ಆರೋಪಿಗಳು ಭಾಗಿಯಾಗಿದ್ದು ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸ್ ಆಯುಕ್ತ ಕುಲದೀಪ್ ಕುಮಾರ್ ಆರ್.ಜೈನ್ ತಿಳಿಸಿದ್ದಾರೆ.
Discover more from Coastal Times Kannada
Subscribe to get the latest posts sent to your email.
Discussion about this post