ಮಂಗಳೂರು: ತರಗತಿಯೊಳಗೆ ಹಿಜಾಬ್ ಧರಿಸುವುದಕ್ಕೆ ಅವಕಾಶ ನಿರಾಕರಿಸಿ ತೀರ್ಪು ನೀಡಿದ ಹೈಕೋರ್ಟ್ ಆದೇಶವನ್ನು ಖಂಡಿಸಿ ನಿನ್ನೆ ಮಂಗಳವಾರ ಪ್ರಥಮ ಪಿಯುಸಿಯ 40 ಮಂದಿ ವಿದ್ಯಾರ್ಥಿನಿಯರು ಉಡುಪಿ ಜಿಲ್ಲೆಯಲ್ಲಿ ಪರೀಕ್ಷೆಗೆ ಗೈರಾಗಿದ್ದಾರೆ. ಕೋರ್ಟ್ ಆದೇಶದಿಂದ ಬೇಸರಗೊಂಡಿದ್ದು ಹಿಜಾಬ್ ಧರಿಸದೆ ಪರೀಕ್ಷೆ ಬರೆಯುವುದಿಲ್ಲ ಎಂದು ವಿದ್ಯಾರ್ಥಿನಿಯರು ತೀರ್ಮಾನಕ್ಕೆ ಬಂದಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿವೆ.
ತರಗತಿಯೊಳಗೆ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಉಡುಪಿಯ ಸರ್ಕಾರಿ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಮಾರ್ಚ್ 15ರಂದು ಹೈಕೋರ್ಟ್ ಅರ್ಜಿಯನ್ನು ವಜಾಗೊಳಿಸಿತ್ತು. ಇಸ್ಲಾಂ ಧರ್ಮದಲ್ಲಿ ಹಿಜಾಬ್ ಧರಿಸುವುದು ಕಡ್ಡಾಯವಲ್ಲ, ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಸಮವಸ್ತ್ರ ಸಂಹಿತೆಯನ್ನು ಪಾಲಿಸಬೇಕೆಂದು ಹೈಕೋರ್ಟ್ ಆದೇಶ ನೀಡಿತ್ತು.
ನಿನ್ನೆ ಪ್ರಥಮ ಪಿಯುಸಿ ಪರೀಕ್ಷೆಗೆ ಗೈರಾದವರಲ್ಲಿ 24 ಮಂದಿ ಕುಂದಾಪುರದ ವಿದ್ಯಾರ್ಥಿನಿಯರು, ಬೈಂದೂರಿನ 14 ಮಂದಿ ವಿದ್ಯಾರ್ಥಿನಿಯರು, ಉಡುಪಿ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ಸೇರಿದ್ದಾರೆ.
ಈ ವಿದ್ಯಾರ್ಥಿನಿಯರು ಈ ಹಿಂದೆ ಪ್ರಾಯೋಗಿಕ ಪರೀಕ್ಷೆಯನ್ನು ಬಹಿಷ್ಕರಿಸಿದ್ದರು. ಆರ್ ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ 28 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರಲ್ಲಿ 13 ಮಂದಿ ಮುಸ್ಲಿಂ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದಾರೆ. ಇನ್ನು ಕೆಲವರಿಗೆ ಪರೀಕ್ಷಾ ಕೇಂದ್ರಕ್ಕೆ ಹಿಜಾಬ್ ಧರಿಸಿಕೊಂಡು ಬಂದವರಿಗೆ ಒಳಗೆ ಹೋಗಲು ಅವಕಾಶ ನಿರಾಕರಿಸಲಾಯಿತು.
ಉಡುಪಿಯ ಭಂಡಾರ್‌ಕಾರ್ ಕಾಲೇಜಿನಲ್ಲಿ ಐವರಲ್ಲಿ ನಾಲ್ವರು ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರೆ, ಬಸ್ರೂರು ಶಾರದ ಕಾಲೇಜಿನ ಎಲ್ಲಾ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು. ನಾವುಂದ ಸರಕಾರಿ ಪಿಯು ಕಾಲೇಜಿನ ಎಂಟು ವಿದ್ಯಾರ್ಥಿನಿಯರ ಪೈಕಿ ಆರು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರೆ, 10 ಮುಸ್ಲಿಂ ಬಾಲಕಿಯರಲ್ಲಿ ಇಬ್ಬರು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು.
ಇನ್ನು ಜಿಲ್ಲೆಯ ಖಾಸಗಿ ಕಾಲೇಜುಗಳಲ್ಲಿ ಹಿಜಾಬ್ ಧರಿಸಿಕೊಂಡು ಬಂದವರಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ತಿಳಿದುಬಂದಿದೆ. ಸುಪ್ರೀಂ ಕೋರ್ಟ್ ಮಾರ್ಚ್ 24ರಂದು ಹೈಕೋರ್ಟ್ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ತುರ್ತು ವಿಚಾರಣೆಗೆ ನಿರಾಕರಿಸಿದೆ.