ಬೆಳ್ತಂಗಡಿ : ರಾಷ್ಟ್ರ ಮಟ್ಟದ ಪ್ರತಿಭಾನ್ವಿತ ವಾಲಿಬಾಲ್ ಆಟಗಾರ್ತಿ, ಉಜಿರೆ ಎಸ್.ಡಿ.ಎಂ. ಕಾಲೇಜಿನ ಹಳೇ ವಿದ್ಯಾರ್ಥಿನಿ ಸಾಲಿಯತ್ (24) ಹೃದಯಾಘಾತದಿಂದ ಬುಧವಾರ ಮೃತಪಟ್ಟಿದ್ದಾರೆ.
ಪಡಂಗಡಿ ಪೊಯ್ಯೇಗುಡ್ಡೆಯ ಇವರಿಗೆ ವರ್ಷದ ಹಿಂದೆ ವಿವಾಹವಾಗಿತ್ತು. ಚಿಕ್ಕಮಗಳೂರಿನ ಪತಿಯ ಮನೆಯಲ್ಲಿ ನೆಲೆಸಿದ್ದರು. ತೀವ್ರ ಹೃದಯಾಘಾತ ಸಮಸ್ಯೆ ಕಾಣಿಸಿಕೊಂಡಿದ್ದರಿಂದ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಸಾಲಿಯತ್ ನಿಧನದಿಂದ ಕುಟುಂಬಸ್ಥರ ರೋದನ ಮುಗಿಲು ಮುಟ್ಟಿದೆ.
ಪಡಂಗಡಿಯಲ್ಲಿ ಪ್ರಾಥಮಿಕ, ಎಸ್.ಡಿ.ಎಂ. ಅನುದಾನಿತ ಪ್ರೌಢ ಶಾಲೆ ಉಜಿರೆಯಲ್ಲಿ 9 ತರಗತಿ, ಮುಂಡಾಜೆಯಲ್ಲಿ 10 ನೇ ತರಗತಿ ಶಿಕ್ಷಣ ಪೂರ್ಣಗೊಳಿಸಿ, ಉಜಿರೆ ಎಸ್.ಡಿ.ಎಂ.ನಲ್ಲಿ ಪದವಿ ಪೂರ್ವ ಹಾಗೂ ಪದವಿ ಶಿಕ್ಷಣ ಪಡೆಯುತ್ತಿರುವಾಗ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ತೋರಿದ್ದರು.
ಹೈದರ್ ಪಡಂಗಡಿ ಅವರ ಗರಡಿಯಲ್ಲಿ ಆರಂಭದ ತರಬೇತಿ ಪಡೆದಿದ್ದರು. ಮುಂದೆ ಪ್ರೌಢ ಶಿಕ್ಷಣವನ್ನು ಮುಂಡಾಜೆ ಶಿಕ್ಷಣ ಸಂಸ್ಥೆಯಲ್ಲಿ ಪಡೆಯುತ್ತಿದ್ದ ಸಂದರ್ಭದಲ್ಲಿ ದೈಹಿಕ ಶಿಕ್ಷಣ ಶಿಕ್ಷಕರಾದ ಗುಣಪಾಲ್ ಎಂ.ಎಸ್. ಅವರ ಗರಡಿಯಲ್ಲಿ ಪಳಗಿದ ಅವರು ವಾಲಿಬಾಲ್ ಆಟದಲ್ಲಿ ಅತ್ಯಂತ ಉತ್ಕೃಷ್ಟ ಪ್ರದರ್ಶನ ನೀಡಿ ಉತ್ತರ ಪ್ರದೇಶದ ಅಲಹಾಬಾದ್‌ನಲ್ಲಿ ನಡೆದ ರಾಷ್ಟ್ರಮಟ್ಟದ ವಾಲಿಬಾಲ್ ಟೂರ್ನಿಯಲ್ಲಿ ಕರ್ನಾಟಕ ರಾಜ್ಯ ತಂಡಕ್ಕೆ ದ್ವಿತೀಯ ಸ್ಥಾನ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸಾಲಿಯತ್ ರಾಷ್ಟ್ರೀಯ ವಾಲಿಬಾಲ್‌ನಲ್ಲಿ ಬೆಳ್ಳಿ ಪದಕ, ಹಿರಿಯ ರಾಷ್ಟ್ರೀಯ ದಕ್ಷಿಣ ವಲಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಮತ್ತು ಜೂನಿಯರ್ ರಾಷ್ಟ್ರೀಯ ಪಂದ್ಯಾವಳಿಯಲ್ಲಿ ಮೂರನೇ ಸ್ಥಾನ ಸೇರಿದಂತೆ ಹಲವಾರು ಪ್ರಶಸ್ತಿಗಳನ್ನು ಗಳಿಸಿದ್ದರು. ಈಕೆಯ ಅಪೂರ್ವ ಸಾಧನೆಗೆ ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರು ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಕೂಡ ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಂತಹ ಕ್ರೀಡಾಪಟುವಿನ ಅಕಾಲಿಕ ನಿಧನಕ್ಕೆ ಎಸ್‌ಡಿಎಂ ಶಿಕ್ಷಣ ಸಂಸ್ಥೆ ಸಂತಾಪ ಸೂಚಿಸಿದೆ.
Discover more from Coastal Times Kannada
Subscribe to get the latest posts sent to your email.







Discussion about this post